ಜಿಲ್ಲೆಯಲ್ಲಿ ಆಕ್ಸಿಜನ್ ಪ್ಲಾಂಟ್ಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ
ಕೊಪ್ಪಳ: ಕೊಪ್ಪಳ ಜಿಲ್ಲೆಯ ಜಿಲ್ಲಾಸ್ಪತ್ರೆ ಹಾಗೂ ಗಂಗಾವತಿಯ ತಾಲ್ಲೂಕು ಆಸ್ಪತ್ರೆಯಲ್ಲಿ ಹೊಸದಾಗಿ ೨ ಆಕ್ಸಿಜನ್ ಪ್ಲಾಂಟ್ಗಳನ್ನು ನಿರ್ಮಿಸಲಾಗುತ್ತಿದ್ದು, ಆಕ್ಸಿಜನ್ ಪ್ಲಾಂಟ್ಗಳ ಕಾಮಗಾರಿಯು ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಾಹಿತಿ ನೀಡಿದರು.
ಬುಧವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-೧೯ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ೧೦೦೦ ಎಲ್ಪಿಎಂ(ಲೀಟರ್ ಪರ್ ಮೀಟರ್) ಸಾಮರ್ಥ್ಯದ ಹಾಗೂ ಗಂಗಾವತಿ ಆಸ್ಪತ್ರೆಯಲ್ಲಿ ೫೦೦ ಎಲ್ಪಿಎಂ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ಗಳನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ, ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ. ಆಕ್ಸಿಜನ್ ಪ್ಲಾಂಟ್ ಸ್ಥಾಪನೆ ಕಾಮಗಾರಿ ಪ್ರಗತಿಯಲ್ಲಿದ್ದು, ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಕಾರ್ಯಗಳು ಬಾಕಿ ಇವೆ. ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಕಾರ್ಯಾರಂಭಗೊಳಿಸಲಾಗುವುದು ಎಂದು ಅವರು ಹೇಳಿದರು.
ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ, ಆರೈಕೆಗಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮಗಳ ಶಾಲೆಗಳಲ್ಲಿ ಕೋವಿಡ್ ಕೇರ್ ಸೆಂಟರ್ಗಳನ್ನು ಆರಂಭಿಸಲಾಗಿದೆ. ಇದರಿಂದ ಸ್ಥಳೀಯ ರೋಗಿಗಳಿಗೆ, ಮನೆಯಲ್ಲಿ ಪ್ರತ್ಯೇಕ ಸೌಲಭ್ಯವಿಲ್ಲದವರಿಗೆ ಉತ್ತಮ ವೈದ್ಯಕೀಯ ಸೇವೆ ನೀಡಲು ಅನುಕೂಲವಾಗುತ್ತಿದೆ. ಜಿಲ್ಲೆಯಾದ್ಯಂತ ೪೦೦ ಕ್ಕೂ ಹೆಚ್ಚು ಕೋವಿಡ್ ಸೋಂಕಿತರು ಕೋವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ನಿಂದ ಮೃತ ಪಟ್ಟ ಪಾಲಕರಿಂದ ಅನಾಥವಾದ ಮಕ್ಕಳ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಒಂದು ವೇಳೆ ಅಂತಹ ಪ್ರಕರಣ ಕಂಡುಬಂದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಮಕ್ಕಳ ಪಾಲನಾ ಕೇಂದ್ರಗಳಿಗೆ ಅಂತಹ ಮಕ್ಕಳನ್ನು ದಾಖಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಮತ್ತು ಅಂತಹ ಮಕ್ಕಳಿಗಾಗಿ ವಿಶೇಷ ಯೋಜನೆ ತಯಾರಿಸಿ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ವಲಸೆ ಅಥವಾ ಗುಳೆಯಿಂದ ಗ್ರಾಮಕ್ಕೆ ಮರಳಿ ಬಂದವರಲ್ಲಿ ಅನೇಕರಿಗೆ ಪಡಿತರ ಸಿಗುತ್ತಿಲ್ಲ ಎಂಬ ದೂರುಗಳಿವೆ. ಅಂತಹವರು ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರರನ್ನು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರನ್ನು ಭೇಟಿ ಮಾಡಿ ಅಗತ್ಯ ಸಹಾಯ ಪಡೆಯಬಹುದು. ಒಂದು ವೇಳೆ ಪಡಿತರ ಚೀಟಿ ಹೊಂದಿಲ್ಲದಿದ್ದರೂ ಗ್ರಾಮ ಲೆಕ್ಕಿಗರನ್ನು ಭೇಟಿ ಮಾಡಿ ಸಹಾಯ ಪಡೆಯಬಹುದು ಎಂದು ಹೇಳಿದರು.
ಕೋವಿಡ್ ಸೋಂಕಿತರು ಕಡ್ಡಾಯವಾಗಿ ಜಿಲ್ಲಾಡಳಿತದಿಂದ ಆರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಾಗಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಮನೆಯಲ್ಲಿ ಅಗತ್ಯವಾದ ಪ್ರತ್ಯೇಕ ಸೌಲಭ್ಯವಿದ್ದು ಹೋಂ ಐಸೋಲೇಷನ್ನಲ್ಲಿರುವ ಸೋಂಕಿತರು ಪೂರ್ತಿ ಗುಣಮುಖರಾಗುವವರೆಗೂ ಸಾರ್ವಜನಿಕವಾಗಿ ಓಡಾಡಬಾರದು ಮತ್ತು ಇತರರೊಂದಿಗೆ ಅಂತರವನ್ನು ಕಾಯ್ದುಕೊಳ್ಳಬೇಕು. ಕೋವಿಡ್-೧೯ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಜಾರಿಗೆ ತಂದಿದ್ದು, ಜಿಲ್ಲೆಯ ನಾಗರಿಕರು ನಿಯಮಗಳನ್ನು ಪಾಲಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಂದರ್ಭ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಟಿ., ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.