ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ತೃಪ್ತಿಕರವಾಗಿಲ್ಲ: ಬಿ.ಸಿ.ಪಾಟೀಲ್

ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಹಿರೇಕಾಸನಕಂಡಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ೪೬ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಪೈಪ್‌ಲೈನ್ ಕಾಮಗಾರಿ ಸರಿಯಾಗಿ ಆಗಿಲ್ಲ ಈ ಕುರಿತು ಸಂಬಂಧಿಸಿದ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಎಂದು ರಾಜ್ಯ ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಹೇಳಿದರು.
ಶುಕ್ರವಾರದಂದು (ಏ.೧೬) ಕೊಪ್ಪಳ ತಾಲ್ಲೂಕಿನ ಹಿರೇಕಾಸನಕಂಡಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಬಹುಗ್ರಾಮ ಕುಡಿಯುವ ನೀರು ಯೋಜನೆ, ಗಿಣಿಗೇರಾದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಹಾಗೂ ಬಹದ್ದೂರ್‌ಬಂಡಿ ಗ್ರಾಮದಲ್ಲಿನ ನವರ್ಕಲ್ ಏತ ನೀರಾವರಿ ಯೋಜನೆ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ, ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ತೃಪ್ತಿಕರವಾಗಿಲ್ಲ ಈ ಬಗ್ಗೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ವ್ಯವಸ್ಥಿತ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು. ಜಿಲ್ಲೆಯಲ್ಲಿ ಪ್ರಸ್ತುತ ೮೩ ಕೋಟಿ ರೂಪಾಯಿ ಮೊತ್ತದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಆರಂಭಿಸಲಾಗುತ್ತಿದ್ದು, ನಿಗದಿತ ಕ್ರಿಯಾಯೋಜನೆಯಂತೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಹಾಗೂ ತ್ವರಿತ ಗತಿಯಲ್ಲಿ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಅವರು ಹೇಳಿದರು.
ಈ ಹಿಂದೆ ಕೆಡಿಪಿ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದ ಬಹುಗ್ರಾಮ ಕುಡಿಯುವ ನೀರು ಹಾಗೂ ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ವೀಕ್ಷಣೆ ಮಾಡಿದ್ದೇನೆ. ೨೪೦ ಎಕರೆಯ ಗಿಣಗೇರಿ ಕೆರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸಾರ್ವಜನಿಕರ ಸಹಭಾಗಿತ್ವದಲ್ಲಿ ಈ ಕೆಲಸ ನಡೆಯುತ್ತಿರುವುದು ಶ್ಲಾಘನೀಯವಾಗಿದೆ. ಜನರು ಕೂಡಾ ಗವಿಶ್ರೀಗಳ ಮೇಲೆ ವಿಶ್ವಾಸ ಹೊಂದಿದ್ದಾರೆ. ಹಾಗಾಗಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾರ್ಯಗಳು ಯಶಸ್ವಿ ಆಗುತ್ತಿವೆ ಎಂದು ಅವರು ಹೇಳಿದರು.
ಕಾಸನಕಂಡಿ ಯೋಜನೆಯ ಗುತ್ತಿಗೆದಾರರನ್ನು ಈಗಾಗಲೇ ಬ್ಲಾಕ್‌ಲಿಸ್ಟ್ಗೆ ಸೇರಿಸಲಾಗಿದ್ದು, ಶೀಘ್ರ ಹೊಸದಾಗಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಯಾವುದೇ ಲಾಕ್‌ಡೌನ್ ಇಲ್ಲ ಎಂದು ನಿನ್ನೆ ಸಿಎಂ ಹೇಳಿದ್ದಾರೆ. ಜನಸಾಮಾನ್ಯರ ಜವಾಬ್ದಾರಿಯೂ ದೊಡ್ಡದಿದ್ದು, ಜನ ಅರ್ಥ ಮಾಡಿಕೊಂಡು ಸರ್ಕಾರದೊಂದಿಗೆ ಸಹಕರಿಸಬೇಕು. ಇನ್ನುಮುಂದೆಯೂ ಜನರು ಪರಿಸ್ಥಿತಿ ಅರಿತು ನಡೆಯದಿದ್ದರೆ ಲಾಕ್‌ಡೌನ್ ಅನಿವಾರ್ಯ ಆಗುತ್ತದೆ ಎಂದರು.
ನಂತರ ಗ್ರ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿ, ಕಾಮಗಾರಿಗಳ ಕುರಿತು ಮಾಹಿತಿ ಪಡೆದರು. ಬಳಿಕ ಗುಳದಳ್ಳಿಯ ಕೆರೆ ತುಂಬಿಸುವ ಯೋಜನೆಯ ಪೈಪ್‌ಲೈನ್ ಕಾಮಗಾರಿಯನ್ನು ವೀಕ್ಷಿಸಿ, ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭ ಶಾಸಕ ರಾಘವೇಂದ್ರ ಹಿಟ್ನಾಳ್, ಜಿಲ್ಲಾ ಪಂಚಾಯತ ಸದಸ್ಯರಾದ ಗವಿಸಿದ್ದಪ್ಪ ಕರಡಿ, ರಾಮಣ್ಣ ಚೌಡ್ಕಿ,
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್, ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಬಾಲಚಂದ್ರನ್, ಜಿಲ್ಲಾ ಪಂಚಾಯತ್ ಕೆಡಿಪಿ ಸದಸ್ಯ ಅಮರೇಶ ಕರಡಿ, ಸಣ್ಣ ನೀರಾವರಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!