75ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ :ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ : ಡಿಸಿ

ಕೊಪ್ಪಳ:75ನೇ ಸ್ವಾತಂತ್ರ್ಯ ದಿನಾಚರಣೆಗೆ ರಚಿಸಲಾದ ಸಂಬಂಧಿಸಿದ ಸಮಿತಿಗಳ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಈ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
೭೫ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುದವಾರ (ಆ.೦೪) ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
೭೫ನೇ ಸ್ವಾತಂತ್ರ್ಯ ದಿನಾಚರಣೆಯು ಅಮೃತ ಮಹೋತ್ಸವವಾಗಿ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷ ಹಾಗೂ ಅರ್ಥಗರ್ಭಿತವಾಗಿ ಆಚರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಯವರು ತಮಗೆ ನೀಡಲಾದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು. ಅಲ್ಲದೇ ನಿವೃತ್ತ ಯೋಧರನ್ನು ಸನ್ಮಾನಿಸುವದಕ್ಕಾಗಿ ಯೋಧರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ ಆಯ್ಕೆ ಮಾಡಬೇಕು. ಸ್ವಾತಂತ್ರ್ಯ ಹೋರಾಟಗಾರರನ್ನು ಸಹ ಸನ್ಮಾನಿಸಬೇಕಾಗಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಮನೆ-ಮನೆಗಳಿಗೆ ತೆರಳಿ ಅಧಿಕಾರಿಗಳು ಅವರನ್ನು ಸನ್ಮಾನಿಸಬೇಕು. ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ, ಕೆ.ಎಸ್.ಆರ್.ಟಿ.ಸಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯವರು ತಮ್ಮ ಇಲಾಖೆಗೆ ಸಂಬಂಧಿಸಿದ ಹಾಗೂ ಅಮೃತ ಮಹೋತ್ಸವಕ್ಕೆ ಸಂಬಂಧಿಸಿದ ಸ್ತಬ್ಧಚಿತ್ರಗಳ ತಯಾರಿಕೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಕೋವಿಡ್-೧೯ರ ಮೂರನೇ ಅಲೆ ಸಂಭವಿಸುವ ಕಾರಣ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯವಶ್ಯಕವಾಗಿದ್ದು, ಆಗಸ್ಟ್ ೧೫ ರಂದು ಜಿಲ್ಲಾ ಕೇಂದ್ರ, ತಾಲ್ಲೂಕು ಕೇಂದ್ರ ಹಾಗೂ ಗ್ರಾಮ ಪಂಚಾಯತಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸರ್ಕಾರದ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಜಿಲ್ಲಾಡಳಿತದ ವತಿಯಿಂದ ಆ. ೧೫ ರಂದು ಬೆಳಗ್ಗೆ ೦೮ ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಹಾಗೂ ೦೯ ಗಂಟೆಗೆ ಜಿಲ್ಲಾ ಕ್ರಿಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದರು.
ಆ. ೧೫ರ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕನಿ? ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಅಲ್ಲದೇ ಈ ಬಾರಿ ಅತಿ ಹೆಚ್ಚು ಜನ ಸೇರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ಶಾಲೆಗಳ ಮುಖ್ಯಸ್ಥರು ಶಾಲೆಗಳಲ್ಲಿ ಸ್ವಾತಂತ್ರ್ಯ ದಿನದಂದು ಕಡ್ಡಾಯವಾಗಿ ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಬೇಕು. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಬೇಕು. ಈ ಬಾರಿ ಕೊರೊನಾ ವಾರಿಯರ್ಸ್ ಹಾಗೂ ದ್ವಿತೀಯ ಪಿ.ಯು ವಿಜ್ಞಾನ, ಕಲಾ, ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಗುವುದು. ಆರೋಗ್ಯ ಇಲಾಖೆಯವರು ಜಿಲ್ಲಾ ಕ್ರೀಡಾಂಗಣದಲ್ಲಿ ಸ್ಕ್ರೀನಿಂಗ್, ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಬೇಕು. ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲಾ ಕ್ರೀಡಾಂಗಣದ ವೇದಿಕೆ ಮೇಲೆ ಮತ್ತು ವೇದಿಕೆಯ ಎಡ ಮತ್ತು ಬಲ ಬದಿಗಳಲ್ಲಿ ಸಾಮಾಜಿಕ ಅಂತರದಲ್ಲಿ ಆಸನಗಳ ವ್ಯವಸ್ಥೆ ಮಾಡಬೇಕು ಅವರು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ಅವರು ಮಾತನಾಡಿ, ತಾಲ್ಲೂಕು ಮಟ್ಟದಲ್ಲಿ ಧ್ವಜ ಸಂಹಿತೆಯನ್ನು ಪಾಲಿಸಿ ವ್ಯವಸ್ಥಿತ ಧ್ವಜಾರೋಹಣ ನೆರವೇರಿಸುವಂತೆ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು. ವ್ಯವಸ್ಥಿತ ಆಚರಣೆಗೆ ರಚಿಸಿದ ಸಮಿತಿಗಳು ನಿರ್ದೇಶನಗಳನ್ವಯ ಕಾರ್ಯ ನಿರ್ವಹಿಸಬೇಕು. ಪಥಸಂಚಲನದಲ್ಲಿ ಹತ್ತಕ್ಕಿಂತ ಹೆಚ್ಚು ತಂಡಗಳು ಪಾಲ್ಗೊಳ್ಳುವಂತಿಲ್ಲ. ಶಾಲಾ ಮ್ಕಕಳಿಂದ ಸಾಮೂಹಿಕ ನೃತ್ಯ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಸಾಯಂಕಾಲದ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ. ಆದರೆ ಕಾರ್ಯಕ್ರಮದ ಔಚಿತ್ಯವನ್ನು ಅರಿತು ಮೂರರಿಂದ ನಾಲ್ಕು ವಿದ್ಯಾರ್ಥಿಗಳ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಬಹುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನುಮ್ ಅವರು ಮಾತನಾಡಿ, ಕೊಪ್ಪಳ ನಗರಸಭೆ ವತಿಯಿಂದ ಕಾರ್ಯಕ್ರಮದ ದಿನದಂದು ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆಯಿಂದ ವೈದ್ಯ ಹಾಗೂ ಶುಶ್ರೂ?ಕರ ಸಹಿತ ಅಂಬುಲೆನ್ಸ್ ಒದಗಿಸಬೇಕು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಉಪಹಾರದ ವ್ಯವಸ್ಥೆ ಕಲ್ಪಿಸಬೇಕು ಎಂದರು.
ಸಭೆಯಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಹೇಮಂತ್ ಕುಮಾರ್, ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಂಗಪ್ಪ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಎಲ್ಲಾ ತಾಲ್ಲೂಕು ತಹಶೀಲ್ದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!