SSLC ಪರೀಕ್ಷೆ: ಆರತಿ ಬೆಳಗಿ ಸೆಲ್ಯೂಟ್ ಮೂಲಕ ವಿದ್ಯಾರ್ಥಿಗಳಿಗೆ ಸ್ವಾಗತಿಸಿದ ಇ.ಓ

ಗಂಗಾವತಿ: ಹತ್ತನೇ ತರಗತಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ಸೆಲ್ಯೂಟ್ ಮಾಡುವ ಮೂಲಕ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಡಿ.ಮೋಹನ್ ಅವರು ಸ್ವಾಗತಿಸಿದರು.
ತಾಲ್ಲೂಕಿನ ಆನೆಗೊಂದಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಹತ್ತನೇ ತರಗತಿ ಪರೀಕ್ಷಾ ಹಿನ್ನೆಲೆ, ಶಾಲೆಗೆ ಭೇಟಿ ನೀಡಿ, ಮಾತನಾಡಿದ ಅವರು, ಕೋವಿಡ್ ಹಿನ್ನೆಲೆ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದು, ರಾಜ್ಯ ಸರ್ಕಾರ ಪರೀಕ್ಷೆಯನ್ನು ನಡೆಸುತ್ತಿದೆ. ಆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಕೆಲಸವನ್ನು ಮಾಡುವ ಸಲುವಾಗಿ, ಶಾಲೆಯನ್ನು ತಳಿರು ತೋರಣಗಳಿಂದ ಶೃಂಗಾರಗೊಳಿಸಲಾಗಿದೆ.
ಜೊತೆಗೆ ಕೇಂದ್ರದ ಒಳಗೆ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗಿದೆ. ಸ್ಯಾನಿಟೈಜರ್ ಮಾಸ್ಕ್‌ಗಳನ್ನು ವಿತರಣೆ ಮಾಡಿದ್ದೇವೆ ಎಂದರು. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ, ಪರೀಕ್ಷೆಯನ್ನು ಚೆನ್ನಾಗಿ ಬರೆಯುವಂತೆ ಪ್ರೋತ್ಸಾಹಿಸಿದರು.
ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ತಿಮ್ಮಪ್ಪ ಬಾಳೆಕಾಯಿ, ಉಪಾಧ್ಯಕ್ಷೆ ಸುಶೀಲಾಬಾಯಿ, ಶಿಕ್ಷಕರಾದ ವೀರಾರೆಡ್ಡಿ, ಶಂಕ್ರಪ್ಪ, ಜಯಶ್ರೀ, ಪಿಡಿಓ ಕೃಷ್ಣಪ್ಪ, ಆರೋಗ್ಯ ಇಲಾಖೆ ಹಾಗೂ ಗ್ರಾ.ಪಂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಇದ್ದರು.

Please follow and like us:

Leave a Reply

Your email address will not be published. Required fields are marked *

WhatsApp
error: Content is protected !!